ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ನಾಳೆ(ಆ.26) ಪೂರ್ಣಗೊಳ್ಳಲಿದೆ. ಎಷ್ಟು ಮಂದಿ ಉಪ ಮುಖ್ಯಮಂತ್ರಿಯಾಗಲಿದ್ದಾರೆಂಬುದು ನಾಳೆಯೇ ಗೊತ್ತಾಗಲಿದ್ದು, ನಮ್ಮ ಸರಕಾರದಲ್ಲಿ ಉಪಮುಖ್ಯಮಂತ್ರಿ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ರವಿವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವರಿಗೆ ಸ್ಥಾನಗಳ ಹಂಚಿಕೆ ನಡೆಯಲಿದ್ದು, ಹೈಕಮಾಂಡ್ ಸೂಚನೆಯನ್ನು ಪಾಲಿಸುತ್ತೇವೆ ಎಂದು ಇದೇ ವೇಳೆ ಹೇಳಿದರು.
ಮಾಜಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿರುವುದಕ್ಕೆ ಪಕ್ಷದ ಕೆಲ ಶಾಸಕರಿಗೆ ಬೇಸರವಿದೆ. ಪಕ್ಷದ ವರಿಷ್ಠರ ಆದೇಶದಂತೆ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಅದೇ ರೀತಿಯಲ್ಲಿ ಬೆಳಗಾವಿಯ ಮತ್ತೊಬ್ಬರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು. ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಪಕ್ಷದ ಹೈಕಮಾಂಡ್ ಸಲಹೆ-ಸೂಚನೆಗಳನ್ನು ಪಾಲಿಸುತ್ತೇವೆ ಎಂದ ಅವರು, ಬಿಜೆಪಿಯಲ್ಲಿ ಯಾವುದೇ ರೀತಿಯ ಸಮಸ್ಯೆ ಹಾಗೂ ಗೊಂದಲಗಳಿಲ್ಲ ಎಂದು ಅವರು ಇದೇ ವೇಳೆ ತಿಳಿಸಿದರು.
ವಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಸಮಸ್ಯೆ ಇದೆಯೇ ಹೊರತು ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ. ಸಚಿವ ಸ್ಥಾನ ದೊರೆಯದಿರುವ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ನೀಡಲಾಗುವುದು ಎಂದರು. 'ವಿಶ್ವ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬಂಗಾರದ ಪದಕ ವಿಜೇತೆ ಪಿ.ವಿ.ಸಿಂಧೂ ಅವರಿಗೆಗೆ ರಾಜ್ಯ ಸರಕಾರದ ವತಿಯಿಂದ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು'
Comments
Post a Comment