ಇದೀಗ ಬಂದ ಸುದ್ದಿ: ವಿರೋಧ ಪಕ್ಷದ ನಾಯಕನಾಗಲು ಹೊರಟ ಸಿದ್ದರಾಮಯ್ಯಗೆ ಆನೆಬಲ

ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ, ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹುದ್ದೆಗೆ ಮಾಜಿ ಡಿಸಿಎಂ ಪರಮೇಶ್ವರ್ ಮತ್ತು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಕೂಡ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ಸಿದ್ದರಾಮಯ್ಯ ಅವರಿಗೆ ವಿಧಾನ ಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನ ನೀಡದಿದ್ದರೆ ಅವರ ಬೆಂಬಲಿಗರು ಬಂಡಾಯವೇಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸುಮಾರು ಐವತ್ತು-ಅರವತ್ತು ಶಾಸಕರು ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದಾರೆ.
ಶಾಸಕ ಭೀಮಾನಾಯ್ಕ್ ಈ ಕುರಿತು ಮಾಹಿತಿ ನೀಡಿದ್ದು, ಸಿದ್ದರಾಮಯ್ಯ ಅವರನ್ನೇ ಪ್ರತಿಪಕ್ಷದ ನಾಯಕರಾಗಿ ನೇಮಿಸುವಂತೆ 50 -60 ಶಾಸಕರು ಮಧುಸೂದನ್ ಮಿಸ್ತ್ರಿ ಅವರಿಗೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರು ಸಿದ್ಧರಾಮಯ್ಯ ಬದಲಿಗೆ ಮೂಲ ಕಾಂಗ್ರೆಸಿಗರಿಗೆ ವಿಪಕ್ಷ ನಾಯಕನ ಸ್ಥಾನ ನೀಡಬೇಕೆಂದು ಸಲಹೆ ನೀಡಿದ್ದಾರೆ ಎನ್ನಲಾಗಿದ್ದು, ಅಧಿವೇಶನದೊಳಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಬೇಕಿರುವುದರಿಂದ ಯಾರಿಗೆ ಅವಕಾಶ ಸಿಗಲಿದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Comments