ಇನ್ನು 2 ತಿಂಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಯಾರೂ ದುಡಕಬೇಡಿ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯರಿಗೆ ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ನಿನ್ನೆ ಜೆಡಿಎಸ್ ವಿಧಾನಪರಿಷತ್ ಸದಸ್ಯರು ಪ್ರತ್ಯೇಕ ಸಭೆ ನಡೆಸಿ ಚರ್ಚೆ ನಡೆಸಿದ್ದ ಹಿನ್ನಲೆಯಲ್ಲಿ ಅವರನ್ನೆಲ್ಲ ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಮಾಲೋಚನೆ ನಡೆಸಿದ ದೇವೇಗೌಡರು ಈ ಭರವಸೆ ನೀಡಿದ್ದಾರೆ. ಮುಂದಿನ ಎರಡು ಮೂರು ತಿಂಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ನೀಡಿರುವ ಗೌಡರು, ವಿಧಾನಪರಿಷತ್ ಸದಸ್ಯರ ಭಿನ್ನಮತ ಶಮನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಅತೃಪ್ತ ವಿಧಾನಪರಿಷತ್ ಸದಸ್ಯರನ್ನು ಮನೆಗೆ ಕರೆಸಿಕೊಂಡು ಚರ್ಚೆ ನಡೆಸಿ ನಿಮಗಾದ ನೋವು ನನ್ನ ಗಮನಕ್ಕೆ ಬಂದಿದೆ. ನಮ್ಮಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾಕಷ್ಟು ನೋವಾಗಿರುವುದು ನಿಜ. ನಿಮಗೆ ಆಗಿರುವ ನೋವು ನನ್ನ ಗಮನಕ್ಕೆ ಬಂದಿದೆ. ನಮ್ಮಿಂದ ಆಗಿರುವ ತಪ್ಪನ್ನು ತಿದ್ದಿಕೊಳ್ಳಲು ಸಿದ್ಧರಾಗಿದ್ದೇವೆ. ನನ್ನ ಉಸ್ತುವಾರಿಯಲ್ಲಿ ಸಭೆ ನಡೆಸಿ ಭಿನ್ನಮತ ಶಮನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಬಸವರಾಜ ಹೊರಟ್ಟಿ, ಟಿ.ಎ. ಶರವಣ, ಅಪ್ಪಾಜಿಗೌಡ ಸೇರಿದಂತೆ ಭಿನ್ನಮತೀಯ ವಿಧಾನಪರಿಷತ್ ಸದಸ್ಯರ ನಿಯೋಗಕ್ಕೆ ಗೌಡರು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ಇನ್ನು ಎರಡು ಮೂರು ತಿಂಗಳಲ್ಲಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ತಿಳಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ ಎನ್ನಲಾಗಿದೆ.
Comments
Post a Comment